ನ್ಯೂಸ್ ಆ್ಯರೋ : ಕರ್ನಾಟಕ ರಾಜ್ಯಾದ್ಯಂತ ವಾಹನ ಸವಾರರು ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ ಇಂದಿನಿಂದಲೇ ಜಾರಿಗೆ ಬರುವಂತೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ.
ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಪ್ರಕಾರ ರಾಜ್ಯ ಪೋಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಈ ಆದೇಶ ಹೊರಡಿಸಿದ್ದಾರೆ.
ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ ಇನ್ನುಮುಂದೆ 1ಸಾವಿರ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಈ ಹಿಂದೆ ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸುವುದು ಕಂಡುಬಂದರೆ ರೂ 500 ದಂಡ ವಿಧಿಸಲಾಗುತ್ತಿತ್ತು, ಪರಿಷ್ಕೃತ ಆದೇಶದಲ್ಲಿ ಈ ದಂಡವನ್ನು ದುಪ್ಪಟ್ಟು ಮಾಡಲಾಗಿದೆ.
ಮೈಸೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮಂಗಳೂರು ನಗರ, ಬೆಳಗಾವಿ ನಗರ ಮತ್ತು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಿಗೆ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ಈ ಆದೇಶ ಹೊರಡಿಸಲಾಗಿದೆ.
ನವಂಬರ್ 1 ರಿಂದ ಜಾರಿಗೆ ಬರುವಂತೆ ನವದೆಹಲಿ ಹಾಗೂ ಮುಂಬೈನಲ್ಲಿ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..