ನ್ಯೂಸ್ ಆ್ಯರೋ : ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕೃಷ್ಣ ಪುರ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಯುವಕನನ್ನು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಚೂರಿ ಇರಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ಹತ್ಯೆ ಮಾಡಿತ್ತು. ಇಂದು ಅದೇ ರೀತಿಯಲ್ಲಿ ಜಲೀಲ್ ಗೂ ಚೂರಿ ಇರಿತವಾಗಿದ್ದು, ಅಂಗಡಿಯೊಂದರ ಮುಂಭಾಗದಲ್ಲೇ ಕೃತ್ಯ ನಡೆದಿದೆ.
ಸದ್ಯ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..