ನ್ಯೂಸ್ ಆ್ಯರೋ : ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್‌ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್‌ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಧರಣಿ ಇದೀಗ ಆರಂಭಿಸಿದ್ದಾರೆ.
ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕುಮಾರ್ ನಿನ್ನೆ ಮನವಿ ಮಾಡಿದ್ದರು.
ಇನ್ನೊಂದೆಡೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಟೋಲ್ ಗೇಟ್‌ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ. ಆದರೆ ಪ್ರತಿಭಟನಾಕಾರರು ಈಗಾಗಲೇ 200 ಮೀಟರ್ ವ್ಯಾಪ್ತಿಯಿಂದ ಹೊರತಾದ ಪ್ರದೇಶದಲ್ಲಿ ತಮ್ಮ ಪ್ರತಿಭಟನೆಯನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ಅದೇ ರೀತಿ ಇದೀಗ ಇಂದು ಮತ್ತೆ ಟೋಲ್‌ಗೇಟ್ ಬಳಿ ಹೋರಾಟಗಾರರು ನಿಷೇಧಾಜ್ಞೆ ಇರುವ ವ್ಯಾಪ್ತಿಯನ್ನು ಹೊರತುಪಡಿಸಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..