ನ್ಯೂಸ್ ಆ್ಯರೋ : ದಶಕಗಳ ಕಾಲ ಯಕ್ಷರಂಗವನ್ನು ಆಳಿದ ಹಲವು ಮೇಳಗಳಲ್ಲಿ ತನ್ನದೇ ಛಾಪು ಮೂಡಿಸಿದ್ದ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ವಿಮರ್ಶಕ ಹಾಗೂ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಮೂರು ಗಂಟೆಯ ಸುಮಾರಿಗೆ ಅವರು ಇಹ ಲೋಕ ತ್ಯಜಿಸಿದ್ದಾರೆ.
ಇಂದಿನ ಮಂಗಳೂರು ಉತ್ತರ ಅಂದಿನ ಸುರತ್ಕಲ್ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕರಾಗಿ 1994 ರಲ್ಲಿ ಆಯ್ಕೆಯಾಗುವ ಮೂಲಕ ಮೊತ್ತ ಮೊದಲ ಬಾರಿಗೆ ಕರಾವಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಗೆಲುವಿನ ಸಿಹಿ ಉಣಿಸಿದ್ದರು.
ಅತ್ಯುತ್ತಮ ಯಕ್ಷಗಾನ ಕಲಾವಿದರಾಗಿದ್ದ ಕುಂಬ್ಳೆ ಸುಂದರ್ ರಾವ್ ಅವರು 80ರ ದಶಕದಿಂದಲೂ ಸ್ಟಾರ್ ಆಗಿ ಮೆರೆದಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಸುರತ್ಕಲ್, ಧರ್ಮಸ್ಥಳ, ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಇವರ ಕಲಾ ಸೇವೆಯನ್ನು ಗುರುತಿಸಿ ಅನೇಕ ಗೌರವಗಳು, ಪ್ರಶಸ್ತಿಗಳು ಸಂದಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿಯೂ ಕೂಡ ಅವರು ಸೇವೆ ಸಲ್ಲಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..